ರಾಯಚೂರು: ನಗರದ ವಾರ್ಡ್ ನಂ. 15ರ ನೇತಾಜಿ ನಗರ ಬಡಾವಣೆಯಲ್ಲಿ ಚರಂಡಿಗಳು ಶಿಥಿಲಗೊಂಡು ಹಲವು ವರ್ಷಗಳು ಕಳೆದರೂ ದುರಸ್ತಿ ಅಥವಾ ಹೊಸ ಚರಂಡಿಗಳ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳದಿರುವುದು ಸ್ಥಳೀಯ ನಿವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಮೂಲಸೌಕರ್ಯಗಳ ಕೊರತೆಯಿಂದ ಬಡಾವಣೆಯ ಜನರು ನಿತ್ಯ ಸಂಕಷ್ಟ ಎದುರಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ನೇತಾಜಿ ನಗರದ ವಿವಿಧ ರಸ್ತೆಗಳಲ್ಲಿ ಚರಂಡಿಗಳು ಒಡೆದು ಹಾಳಾಗಿದ್ದು, ಕೆಲವೆಡೆ ಚರಂಡಿಗಳ ಅಂಚುಗಳು ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕಿರಿದಾಗಿರುವ ರಸ್ತೆಗಳಲ್ಲಿ ಹದಗೆಟ್ಟ ಚರಂಡಿಗಳಿಂದಾಗಿ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ವಾಹನ ಸವಾರರು ಚರಂಡಿಗೆ ಬಿದ್ದು ಅಪಘಾತಕ್ಕೀಡಾಗುವ ಸಾಧ್ಯತೆಯಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಬಡಾವಣೆಯಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮನೆಗಳಿಂದ ಹೊರಬರುವ ಕೊಳಚೆ ನೀರು ಹಾಗೂ ಮಲಮೂತ್ರ ಮಿಶ್ರಿತ ತ್ಯಾಜ್ಯ ನೀರು ತೆರೆದ ಚರಂಡಿಗಳಲ್ಲಿ ಹರಿಯುತ್ತಿದೆ ಎನ್ನಲಾಗಿದೆ. ಇದರಿಂದ ಸುತ್ತಮುತ್ತಲಿನ ಪರಿಸರ ಕಲುಷಿತಗೊಳ್ಳುವುದರ ಜೊತೆಗೆ ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಈ ಅವ್ಯವಸ್ಥೆಯಿಂದ ತೊಂದರೆ ಅನುಭವಿಸುವಂತಾಗಿದೆ.
ನಗರದ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ನೇತಾಜಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡದಿರುವುದು ಏಕೆ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ. ನಗರದ ಅಭಿವೃದ್ಧಿಗೆ ₹200 ಕೋಟಿ ಅನುದಾನ ಬಂದಿದೆ ಎನ್ನಲಾಗುತ್ತಿದ್ದು, ಆ ಅನುದಾನದಲ್ಲಿ ವಾರ್ಡ್ ನಂ. 15ರ ಅಭಿವೃದ್ಧಿಗೆ ಎಷ್ಟು ಹಣ ಮೀಸಲಿಡಲಾಗಿದೆ ಎಂಬುದನ್ನು ಮಹಾನಗರ ಪಾಲಿಕೆ ಸ್ಪಷ್ಟಪಡಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಪಲುಗುಲ ನಾಗರಾಜ ಅವರು, ವರ್ಷಗಳಿಂದ ಚರಂಡಿಗಳು ದುಸ್ಥಿತಿಯಲ್ಲಿದ್ದರೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದು ಪಾಲಿಕೆಯ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ, ಜನರು ಪದೇಪದೇ ಸಮಸ್ಯೆಗಳನ್ನು ಗಮನಕ್ಕೆ ತಂದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ವಾರ್ಡ್ನ ಅಭಿವೃದ್ಧಿಗೆ ಅನುದಾನದ ಕೊರತೆಯಿದೆಯೇ ಅಥವಾ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿಲ್ಲವೇ ಎಂಬುದನ್ನು ಪಾಲಿಕೆ ಆಡಳಿತ ಸ್ಪಷ್ಟಪಡಿಸಬೇಕು. ಹಾಳಾದ ಚರಂಡಿಗಳಿಂದ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಥಿಲಗೊಂಡಿರುವ ಚರಂಡಿಗಳನ್ನು ತೆರವುಗೊಳಿಸಿ, ಸುಸಜ್ಜಿತ ಹೊಸ ಚರಂಡಿಗಳನ್ನು ನಿರ್ಮಿಸುವುದರೊಂದಿಗೆ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪಲುಗುಲ ನಾಗರಾಜ ಒತ್ತಾಯಿಸಿದ್ದಾರೆ.



