ಮಾನ್ವಿ: ಪಟ್ಟಣದಲ್ಲಿ ಅಮೃತ್-2 ಯೋಜನೆಯಡಿ ಕೈಗೊಳ್ಳಲಾಗಿರುವ ಕುಡಿಯುವ ನೀರು ಸರಬರಾಜು ಕಾಮಗಾರಿಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಪಡೆದ ನಳಂದ ಸಂಸ್ಥೆಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದ್ದು, ಕಾಮಗಾರಿ ವಿಳಂಬಕ್ಕೆ ದಂಡ ವಿಧಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರಾಯಚೂರು ವಿಭಾಗದ ಸಹಾಯಕ ಅಭಿಯಂತರ ಧನ್ಯಶ್ರೀ ತಿಳಿಸಿದರು.

ಪಟ್ಟಣದ ವಿವಿಧೆಡೆ ನಡೆಯುತ್ತಿರುವ ಅಮೃತ್-2 ಯೋಜನೆಯ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ಅಮೃತ್-2 ಯೋಜನೆಯಡಿ ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೈಗೊಂಡಿರುವ ಕಾಮಗಾರಿಯನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ನೀಡಲಾಗಿತ್ತು. ಆದರೆ ಗುತ್ತಿಗೆ ಪಡೆದ ನಳಂದ ಸಂಸ್ಥೆಯು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ವಿಳಂಬಕ್ಕೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆ ಸಂಸ್ಥೆಗೆ ಸೂಚಿಸಲಾಗುವುದು ಎಂದು ಹೇಳಿದರು.

ಪಟ್ಟಣದ ಕೆಲವು ಪ್ರದೇಶಗಳಲ್ಲಿ ಖಾಸಗಿ ಜಾಗದಲ್ಲಿ ಪೈಪ್‌ಲೈನ್ ಅಳವಡಿಸಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ. ಅಲ್ಲದೆ, ನಿಗದಿತ ರಸ್ತೆ ಮಾರ್ಗವನ್ನು ಅನುಸರಿಸದೆ ಪೈಪ್‌ಲೈನ್ ಅಳವಡಿಸಿರುವುದು ಹಾಗೂ ನಿಗದಿತ ಆಳದಲ್ಲಿ ಪೈಪ್‌ಗಳನ್ನು ಅಳವಡಿಸಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಬಂದಿವೆ. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಮೃತ್-2 ಯೋಜನೆಯಡಿ ತುಂಗಭದ್ರಾ ನದಿಯಿಂದ ಹಾಗೂ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಪಟ್ಟಣದ ಕೆಲವು ವಾರ್ಡ್‌ಗಳಲ್ಲಿ ಪ್ರಾಯೋಗಿಕವಾಗಿ ಮನೆಗಳಿಗೆ ನೀರಿನ ಸಂಪರ್ಕ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪೈಪ್‌ಲೈನ್ ಅಳವಡಿಕೆಯಲ್ಲಿ ತಾಂತ್ರಿಕ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಮಗಾರಿಯನ್ನು ಮತ್ತಷ್ಟು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗುತ್ತಿಗೆ ಸಂಸ್ಥೆಗೆ ಸೂಚನೆ ನೀಡಲಾಗುವುದು ಎಂದು ಧನ್ಯಶ್ರೀ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಾಜಿ ಅಧ್ಯಕ್ಷ ಜಿ. ಸುಧಾಕರ್, ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಆರಂಭಿಸಲಾದ ಅಮೃತ್-2 ಯೋಜನೆಯ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಬದಿಯನ್ನು ಅನುಸರಿಸದೆ ಹಾಗೂ ನಿಗದಿತ ಆಳದಲ್ಲಿ ಪೈಪ್‌ಗಳನ್ನು ಅಳವಡಿಸದೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ದೂರುಗಳಿವೆ. ಈ ರೀತಿಯ ಅವೈಜ್ಞಾನಿಕ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಪೈಪ್‌ಲೈನ್‌ಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಇದರಿಂದ ಸಾರ್ವಜನಿಕರಿಗೆ ಮತ್ತಷ್ಟು ತೊಂದರೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಪುರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕೃತ ನಕ್ಷೆಗಳಿಗೆ ಅನುಗುಣವಾಗಿ ರಸ್ತೆ ಬದಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಪೈಪ್‌ಲೈನ್ ಅಳವಡಿಸಬೇಕು. ಕಾಮಗಾರಿಯ ಗುಣಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಲೋಪದೋಷಗಳಿದ್ದಲ್ಲಿ ಸರಿಪಡಿಸಬೇಕು. ಬಹುಕೋಟಿ ರೂಪಾಯಿ ವೆಚ್ಚದ ಯೋಜನೆಯ ಪ್ರಯೋಜನ ಸಾರ್ವಜನಿಕರಿಗೆ ಶೀಘ್ರವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿ, ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಪಟ್ಟಣದ ಪ್ರತಿಯೊಂದು ಮನೆಗೂ ಸಮರ್ಪಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಮೂಲಕ ಯೋಜನೆಯ ಉದ್ದೇಶ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತೃತೀಯ ಪಕ್ಷದ ಪರಿಶೀಲನಾ ಸಂಸ್ಥೆ ಹಾಗೂ ಗುತ್ತಿಗೆದಾರರ ಪ್ರತಿನಿಧಿ ಶ್ರೀನಿವಾಸ, ಬಿಜೆಪಿ ಮುಖಂಡರಾದ ವಕೀಲ ವಿಶ್ವನಾಥ ರಾಯಪ್ಪ, ಯುವ ಮೋರ್ಚಾ ಅಧ್ಯಕ್ಷ ರವಿಕುಮಾರ ಸಾಹುಕಾರ್, ಜಗದೀಶ ಒತ್ತೂರು, ಉಮಾಪತಿನಾಯಕ, ಬಸವಪ್ರಭು ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.