ಮಾನ್ವಿ: ಗ್ರಾಮೀಣ ಭಾಗದ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸದೃಢವಾಗಿದ್ದಾಗ ಮಾತ್ರ ಗ್ರಾಮೀಣ ಜನರಿಗೆ ಅಗತ್ಯ ಸಾಲ ಸೌಲಭ್ಯಗಳು ಸುಲಭವಾಗಿ ದೊರೆಯಲು ಸಾಧ್ಯ ಎಂದು ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ ಹೇಳಿದರು.

ಪಟ್ಟಣದಲ್ಲಿ ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ (ಆರ್‌ಕೆಡಿಸಿಸಿ) ಮಾನ್ವಿ ಶಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಅನೇಕ ಸಹಕಾರಿ ಬ್ಯಾಂಕ್‌ಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವುದು ಆಡಳಿತ ಮಂಡಳಿಯ ಸಮರ್ಥ ನಿರ್ವಹಣೆಗೆ ಸಾಕ್ಷಿಯಾಗಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸದೃಢವಾಗಿದ್ದರೆ ತಾಲೂಕು ಹಾಗೂ ಗ್ರಾಮ ಮಟ್ಟದ ಸಹಕಾರಿ ಸಂಸ್ಥೆಗಳೂ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಆರ್‌ಕೆಡಿಸಿಸಿ ಬ್ಯಾಂಕ್‌ನ ಒಟ್ಟು 28 ಶಾಖೆಗಳ ಪೈಕಿ 9 ಶಾಖೆಗಳು ಸ್ವಂತ ಕಟ್ಟಡಗಳನ್ನು ಹೊಂದಿದ್ದು, ರೈತರು ಹಾಗೂ ಗ್ರಾಹಕರಿಗೆ ಅಗತ್ಯವಿರುವ ವಿವಿಧ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿವೆ. ಸಹಕಾರಿ ಕ್ಷೇತ್ರದ ಬೆಳವಣಿಗೆಯಿಂದ ಗ್ರಾಮೀಣ ಆರ್ಥಿಕ ವ್ಯವಸ್ಥೆಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ತಿಳಿಸಿದರು.

ಬ್ಯಾಂಕ್‌ನ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಸಹಕಾರಿ ತತ್ವದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕ ಸಂಸ್ಥೆಗಳು ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಿವೆ. ಆರ್‌ಕೆಡಿಸಿಸಿ ಬ್ಯಾಂಕ್ ಗ್ರಾಹಕರು ಹಾಗೂ ರೈತರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ₹98 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ರೈತರಿಗೆ ಕೃಷಿ ಅಭಿವೃದ್ಧಿ ಸಾಲ, ಬೆಳೆಸಾಲ ಸೇರಿದಂತೆ ಸಣ್ಣ ವ್ಯಾಪಾರಿಗಳು ಹಾಗೂ ಮಹಿಳೆಯರಿಗೆ ಅಗತ್ಯವಿರುವ ವಿವಿಧ ಆರ್ಥಿಕ ಸೌಲಭ್ಯಗಳನ್ನು ಸಹಕಾರಿ ಬ್ಯಾಂಕ್‌ಗಳ ಮೂಲಕ ಒದಗಿಸಲಾಗುತ್ತಿದೆ. ಸರ್ಕಾರವು ಸಹಕಾರಿ ಬ್ಯಾಂಕ್‌ಗಳ ಮೂಲಕ ಅರ್ಹ ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸುತ್ತಿದೆ. ಇದರ ಜತೆಗೆ ರೈತರಿಗೆ ಅಗತ್ಯವಿರುವ ರಾಸಾಯನಿಕ ಗೊಬ್ಬರಗಳನ್ನು ಗ್ರಾಮ ಮಟ್ಟದಲ್ಲಿಯೇ ವಿತರಿಸುವ ವ್ಯವಸ್ಥೆಯೂ ಸಹಕಾರಿ ಕ್ಷೇತ್ರದ ಮೂಲಕ ನಡೆಯುತ್ತಿದೆ ಎಂದು ವಿವರಿಸಿದರು.

ಆರ್‌ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ ಮಾತನಾಡಿ, ಬ್ಯಾಂಕ್ ₹15 ಕೋಟಿ ಠೇವಣಿ ಹೊಂದಿದ್ದು, ತಾಲೂಕಿನ ಸಹಕಾರಿ ಸಂಸ್ಥೆಗಳ ಠೇವಣಿಗಳಿಗೂ ಉತ್ತಮ ಬಡ್ಡಿ ನೀಡುತ್ತಿದೆ. ಸುಮಾರು 1.14 ಲಕ್ಷ ಸದಸ್ಯರಿಗೆ ವಿವಿಧ ಆರ್ಥಿಕ ಸೇವೆಗಳನ್ನು ಒದಗಿಸಲಾಗುತ್ತಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಲಾಗುತ್ತಿದ್ದು, ₹128 ಕೋಟಿ ಒತ್ತೆ ಸಾಲ ಸೇರಿದಂತೆ ಇದುವರೆಗೆ ಒಟ್ಟು ₹800 ಕೋಟಿ ಸಾಲ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬ್ಯಾಂಕ್‌ನ ವಿವಿಧ ಆರ್ಥಿಕ ಚಟುವಟಿಕೆಗಳಿಂದ ಸುಮಾರು 10 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಮಾನ್ವಿ ಶಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸಲಾಗಿದ್ದು, ರೈತರಿಗೆ ಬೆಳೆಸಾಲ, ಬೆಳೆ ಒತ್ತೆ ಸಾಲ ಹಾಗೂ ಚಿನ್ನಾಭರಣ ಅಡಮಾನ ಸಾಲ ಸೇರಿದಂತೆ ಹಲವು ಸೌಲಭ್ಯಗಳನ್ನು ಸುಲಭವಾಗಿ ಒದಗಿಸಲಾಗುತ್ತಿದೆ. ಸಾಲ ಪಡೆದ ಸದಸ್ಯರು ಮೃತಪಟ್ಟ ಸಂದರ್ಭದಲ್ಲಿ ನಿಗದಿತ ನಿಯಮಗಳ ಪ್ರಕಾರ ಕುಟುಂಬಗಳಿಗೆ ಸಹಾಯಧನ ನೀಡುವ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು.

ಆರ್‌ಕೆಡಿಸಿಸಿ ಬ್ಯಾಂಕ್ ಇಂದು ಉತ್ತಮ ಆರ್ಥಿಕ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಆಡಳಿತ ಮಂಡಳಿಯ ಜತೆಗೆ ತಾಲೂಕಿನ ವಿವಿಧ ಸಹಕಾರಿ ಸಂಘಗಳು, ಸದಸ್ಯರು ಹಾಗೂ ಗ್ರಾಹಕರು ನೀಡುತ್ತಿರುವ ಸಹಕಾರವೇ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್‌ನ ಸೇವೆಗಳನ್ನು ಮತ್ತಷ್ಟು ವಿಸ್ತರಿಸಿ ರೈತರು ಮತ್ತು ಸಾಮಾನ್ಯ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಮಹಾಮಂಡಳಿ ನಿರ್ದೇಶಕ ಮಹಾಂತೇಶ ಪಾಟೀಲ್ ಅತ್ತನೂರು, ಮಾನ್ವಿ ಟಿಎಪಿಸಿಎಂಎಸ್ ಅಧ್ಯಕ್ಷ ಎಸ್. ತಿಮ್ಮರೆಡ್ಡಿ ಭೋಗವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮರೇಶಪ್ಪ ವಕೀಲರು, ಆರ್‌ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಶಂಕರಗೌಡ ಪಾಟೀಲ್, ನಿರ್ದೇಶಕರಾದ ಮಲ್ಲನಗೌಡ ನಕ್ಕುಂದಿ, ಶರಣೇಗೌಡ ಪೊಲೀಸ್ ಪಾಟೀಲ್ ಕೊಂತನೂರು, ಶರಣಪ್ಪ ಹ್ಯಾಟಿ ಉಪಸ್ಥಿತರಿದ್ದರು.

ಸಹಕಾರ ಸಂಘಗಳ ಉಪನಿಬಂಧಕ ಹಾಗೂ ಬ್ಯಾಂಕ್ ಸಿಇಒ ಮನೋಹರ್ ಎಂ.ಆರ್., ಮಾನ್ವಿ ಶಾಖಾ ವ್ಯವಸ್ಥಾಪಕಿ ವಾಣಿಶ್ರೀ ದಾನಿ, ಸಹಕಾರಿಗಳಾದ ಉಮಾಕಾಂತ, ರಾಜಾ ಸುಭಾಷ್‌ಚಂದ್ರ ನಾಯಕ, ಶ್ರೀಕಾಂತ, ಮನೋಜಗೌಡ, ಶರಣಪ್ಪ ನಕ್ಕುಂದಿ, ಸತ್ಯನಾರಾಯಣ ವಕೀಲರು ಸೇರಿದಂತೆ ತಾಲೂಕಿನ ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.