ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ ಅಶ್ವಿನಿ ಒಕ್ರಾಣಿ ಮತ್ತು ರಾಣಮ್ಮ ಕರಡಕಲ್ ಅವರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಬೇಕು. ಆದರೆ, ರಾಜಕೀಯ ಒತ್ತಡಕ್ಕೆ ಮಣಿದಿರುವ ಗೃಹ ಸಚಿವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ) ರಾಜ್ಯ ಸಮಿತಿಯ ರಾಜ್ಯ ಸಂಚಾಲಕ ಡಾ. ಆರ್. ಮೋಹನರಾಜ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ಗಂಭೀರ ಸ್ವರೂಪ ಪಡೆದುಕೊಂಡಿವೆ. ಇಂತಹ ಘಟನೆಗಳು ನಿರಂತರವಾಗಿ ವರದಿಯಾಗುತ್ತಿದ್ದರೂ ತಪ್ಪಿತಸ್ಥರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಆಗಸ್ಟ್ ತಿಂಗಳಲ್ಲಿ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ದಲಿತ ಬಹುಜನ ಮುಖಂಡ ಭೂಮಾನಂದ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದೇ ರೀತಿ ಅಶ್ವಿನಿ ಒಕ್ರಾಣಿ ಹಾಗೂ ರಾಣಮ್ಮ ಕರಡಕಲ್ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣಗಳು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿವೆ. ಈ ಘಟನೆಗಳ ಹಿಂದಿರುವ ನೈಜ ಕಾರಣಗಳು, ಆರೋಪಿಗಳ ಪಾತ್ರ ಹಾಗೂ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ದಲಿತ ಸಮುದಾಯವು ಜನಸಂಖ್ಯೆಯ ದೃಷ್ಟಿಯಿಂದ ಎರಡನೇ ಅತಿ ದೊಡ್ಡ ಸಮುದಾಯವಾಗಿದ್ದರೂ ಅದರ ಸದಸ್ಯರಿಗೆ ಸೂಕ್ತ ಭದ್ರತೆ ಹಾಗೂ ನ್ಯಾಯ ದೊರೆಯುತ್ತಿಲ್ಲ. ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವುದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಟೀಕಿಸಿದರು.

ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವುದರ ಜೊತೆಗೆ ಪ್ರಕರಣಗಳ ಹಿಂದಿರುವ ಸತ್ಯಾಂಶಗಳನ್ನು ಸಾರ್ವಜನಿಕರ ಮುಂದೆ ತರಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಮೂರು ಪ್ರಕರಣಗಳ ತನಿಖೆಯನ್ನು ಕೂಡಲೇ ಸಿಐಡಿಗೆ ವಹಿಸಬೇಕು. ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬರುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ನಡೆಸಿ ಸಾಮಾಜಿಕ ಬಹಿಷ್ಕಾರ ಹೇರಿರುವ ಆರೋಪದ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ಅಮಾನವೀಯ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ನೀಡಿದ್ದು, ಅದನ್ನು ಉಲ್ಲಂಘಿಸುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಿಡಿಗೋಳ ಗ್ರಾಮದಲ್ಲಿ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಭಾನುವಾರ ಬೃಹತ್ ಬೈಕ್ ರ‍್ಯಾಲಿ ಮತ್ತು ಗ್ರಾಮದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಆದರೆ, ಜಿಲ್ಲಾಡಳಿತ ಬಹಿರಂಗ ಸಭೆ ನಡೆಸಲು ಅನುಮತಿ ನೀಡದಿರುವುದು ಖಂಡನೀಯ. ಶಾಂತಿಯುತವಾಗಿ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದೂರಿದರು.

ಜಿಲ್ಲಾಡಳಿತ ಅನುಮತಿ ನಿರಾಕರಿಸಿದರೂ ಪೂರ್ವನಿಗದಿಯಂತೆ ‘ತಿಡಿಗೋಳ ಚಲೋ’ ಬೈಕ್ ರ‍್ಯಾಲಿ ನಡೆಸಲಾಗುವುದು. ಈ ಸಂದರ್ಭದಲ್ಲಿ ಪೊಲೀಸರು ಬಂಧಿಸಿದರೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ದಲಿತರ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುವುದು ನಮ್ಮ ಸಂಘಟನೆಯ ಬದ್ಧತೆಯಾಗಿದೆ. ಬಂಧನ ಹಾಗೂ ಹೋರಾಟಗಳು ನಮಗೆ ಹೊಸದೇನಲ್ಲ ಎಂದು ಡಾ. ಆರ್. ಮೋಹನರಾಜ್ ಎಚ್ಚರಿಸಿದರು.

ಸರ್ಕಾರ ದಲಿತ ಸಮುದಾಯದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ತನಿಖೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಲು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ರವೀಂದ್ರನಾಥ ಪಟ್ಟಿ, ರಾಜು ಪಟ್ಟಿ, ಮಹೇಶ್, ಸಂತೋಷ್, ಎಂ.ಆರ್. ಭೇರಿ ಹಾಗೂ ಪ್ರಸಾದ್ ಉಪಸ್ಥಿತರಿದ್ದರು.