ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಲು ಆಗ್ರಹ

ರಾಯಚೂರು: ರೈತರು ಉತ್ಪಾದಿಸುವ ಎಲ್ಲ ಕೃಷಿ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸಮಗ್ರ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಲಾಭಾಂಶ ಸೇರಿಸಿ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವುದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು. ಈ ಸಂಬಂಧ ಕೇಂದ್ರ ಸರ್ಕಾರ ಎರಡು ತಿಂಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ರೈತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಮರಳಿ ಸುಲ್ತಾನಪುರ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ರೈತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ, ದೇಶಕ್ಕೆ ಅನ್ನ ನೀಡುವ ರೈತರೇ ಇಂದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿದ್ದರೂ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯದಿರುವುದು ರೈತರ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಹಸಿರು ಕ್ರಾಂತಿಗೆ ಒತ್ತು ನೀಡಲಾಯಿತು. ಇದರ ಪರಿಣಾಮ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಸಾಧಿಸಿದರೂ ರಾಸಾಯನಿಕ ಗೊಬ್ಬರ, ಕೀಟನಾಶಕ, ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣ ಹಾಗೂ ಕೂಲಿ ವೆಚ್ಚ ಹೆಚ್ಚಳದಿಂದ ಕೃಷಿ ದುಬಾರಿಯಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾದ ಬೆಲೆ ದೊರೆಯದಿರುವುದರಿಂದ ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ಹೇಳಿದರು.

ಪ್ರಸ್ತುತ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ವ್ಯವಸ್ಥೆಯು ರೈತರ ನೈಜ ಉತ್ಪಾದನಾ ವೆಚ್ಚವನ್ನು ಸಮರ್ಪಕವಾಗಿ ಪ್ರತಿಬಿಂಬಿಸುತ್ತಿಲ್ಲ. ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ (ಸಿಎಸಿಪಿ) ಶಿಫಾರಸುಗಳ ಜೊತೆಗೆ ಸ್ವಾಮಿನಾಥನ್ ಆಯೋಗದ ತತ್ವಗಳನ್ನು ಪರಿಗಣಿಸಿ ಎಲ್ಲ ಬೆಳೆಗಳಿಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ರೈತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಂತಹ ಕೃಷಿ ಮಾರುಕಟ್ಟೆ ವ್ಯವಸ್ಥೆ ರೂಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿದರು.

ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ವರ್ತಕರು ಕೃಷಿ ಉತ್ಪನ್ನಗಳನ್ನು ಖರೀದಿಸದಂತೆ ಕಾನೂನುಬದ್ಧ ನಿರ್ಬಂಧ ವಿಧಿಸಬೇಕು. ಒಂದು ವೇಳೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಉಂಟಾದರೆ ಸರ್ಕಾರವೇ ಮಧ್ಯಪ್ರವೇಶಿಸಿ ವರ್ಷಪೂರ್ತಿ ಖರೀದಿ ಕೇಂದ್ರಗಳನ್ನು ಕಾರ್ಯನಿರ್ವಹಿಸುವಂತೆ ಮಾಡಬೇಕು. ರೈತರಿಂದ ಖರೀದಿಸಿದ ಉತ್ಪನ್ನಗಳ ಹಣವನ್ನು ಅದೇ ದಿನ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು ದಶಕಗಳಿಂದ ಸ್ವಾಮಿನಾಥನ್ ಆಯೋಗದ ಪ್ರಮುಖ ಶಿಫಾರಸುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಸರ್ಕಾರಗಳು ರೈತರ ಹಿತದೃಷ್ಟಿಯಿಂದ ಕೇವಲ ಭರವಸೆ ನೀಡದೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.

ಕೃಷಿ ಕ್ಷೇತ್ರದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ರೈತರ ಎಲ್ಲ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ಸಾಲ ವಸೂಲಾತಿ ನೆಪದಲ್ಲಿ ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳಿಗೆ ತೆರಳಿ ಒತ್ತಡ ಹೇರುವುದು, ಟ್ರ್ಯಾಕ್ಟರ್ ಹಾಗೂ ಕೃಷಿ ಉಪಕರಣಗಳನ್ನು ವಶಪಡಿಸಿಕೊಳ್ಳುವುದು, ನೋಟಿಸ್ ಜಾರಿಗೊಳಿಸಿ ಕಿರುಕುಳ ನೀಡುವಂತಹ ಕ್ರಮಗಳಿಗೆ ಕಡಿವಾಣ ಹಾಕಬೇಕು. ಸಾಲದ ಹೊರೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಬರಗಾಲ ಮತ್ತು ನೀರಿನ ಕೊರತೆಯಿಂದ ಕೃಷಿ ಉತ್ಪಾದನೆಗೆ ತೀವ್ರ ಹೊಡೆತ ಬೀಳುತ್ತಿದೆ. ಹೀಗಾಗಿ ಸಮಗ್ರ ನೀರಾವರಿ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಬೇಕು. ನದಿ ಜೋಡಣೆ ಯೋಜನೆಗಳ ಸಾಧ್ಯತೆಯನ್ನು ಪರಿಶೀಲಿಸಿ ನೀರಿನ ಸಮರ್ಪಕ ಬಳಕೆಗೆ ಕ್ರಮ ಕೈಗೊಳ್ಳಬೇಕು. ವರ್ಷಗಳಿಂದ ಸ್ಥಗಿತಗೊಂಡಿರುವ ಏತ ನೀರಾವರಿ ಯೋಜನೆಗಳನ್ನು ಪುನಶ್ಚೇತನಗೊಳಿಸಿ ರೈತರ ಜಮೀನುಗಳಿಗೆ ನಿರಂತರ ನೀರು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ರೈತರು ಮಾರಾಟ ಮಾಡುವ ಉತ್ಪನ್ನಗಳ ತೂಕ ಹಾಗೂ ಗುಣಮಟ್ಟದ ಹೆಸರಿನಲ್ಲಿ ಅನಧಿಕೃತವಾಗಿ ಹಣ ಕಡಿತಗೊಳಿಸುವ ಪದ್ಧತಿಯನ್ನು ನಿಲ್ಲಿಸಬೇಕು. ವಿಶೇಷವಾಗಿ 'ಸೂಟ್' ಹೆಸರಿನಲ್ಲಿ ರೈತರ ಹಣ ಕಡಿತ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕೃಷಿ ಮಾರುಕಟ್ಟೆಯಲ್ಲಿ ಪಾರದರ್ಶಕತೆ ಕಾಪಾಡುವ ಮೂಲಕ ರೈತರಿಗೆ ನ್ಯಾಯಯುತ ದರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದರ ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು. ರೈತರ ಹಿತಾಸಕ್ತಿಗೆ ವಿರುದ್ಧವಾಗಿರುವ ಕೃಷಿ ಕಾಯ್ದೆಗಳು ಹಾಗೂ ನೀತಿಗಳನ್ನು ಹಿಂಪಡೆದು ಕೃಷಿಕರ ಬದುಕಿಗೆ ಭದ್ರತೆ ಒದಗಿಸುವ ಜನಪರ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಮುಂದಾಗಬೇಕು. ಎರಡು ತಿಂಗಳೊಳಗೆ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ರಾಷ್ಟ್ರಮಟ್ಟದಲ್ಲಿ ರೈತ ಸಂಘಟನೆಗಳನ್ನು ಒಗ್ಗೂಡಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಶರಣಪ್ಪ ಮರಳಿ ಸುಲ್ತಾನಪುರ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ರಾಮಯ್ಯ ಜವಳಗೆರೆ, ನರಸಪ್ಪ ದೇವಸುಗೂರು, ವೆಂಕಟೇಶ, ಚೆನ್ನಪ್ಪ, ರಾಮಬಾಬು, ಚನ್ನಬಸಯ್ಯ, ನಾಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.