ಸಿಂಧನೂರು, ನ. 7: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಪಠ್ಯ ಶಿಕ್ಷಣದೊಂದಿಗೆ ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿಯ ಅಧ್ಯಕ್ಷ ಎಸ್. ಶರಣೇಗೌಡ ಹೇಳಿದರು.

ನಗರದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ಶನಿವಾರ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನಶೈಲಿ, ಸಮಯಪ್ರಜ್ಞೆ, ಸಹಕಾರ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಆರಂಭವಾದ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ಇಂದು ವಿಶ್ವಾದ್ಯಂತ ವ್ಯಾಪಕವಾಗಿ ಬೆಳೆದಿದೆ. ಸಣ್ಣ ಪ್ರಮಾಣದಲ್ಲಿ ಆರಂಭಗೊಂಡ ಈ ಚಳವಳಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ಕಲಿಸುವ ಪ್ರಮುಖ ವೇದಿಕೆಯಾಗಿ ರೂಪುಗೊಂಡಿದೆ ಎಂದು ತಿಳಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಆತ್ಮವಿಶ್ವಾಸ, ಧೈರ್ಯ, ಸ್ವಾವಲಂಬನೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ. ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಸಮಾಜದ ಬಗ್ಗೆ ಕಾಳಜಿ ಹೊಂದುವುದು ಅತ್ಯಗತ್ಯ. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿಯೂ ವಿವಿಧ ಸೌಲಭ್ಯಗಳನ್ನು ಪಡೆಯಲು ಅವಕಾಶವಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಘಟಕಗಳಿಗೆ ಸೇರ್ಪಡೆಯಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ರಾಯಚೂರು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ ಬೀರಪ್ಪ ಶಂಭೋಜಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯಂತ ಪರಿಣಾಮಕಾರಿ ವೇದಿಕೆಯಾಗಿದೆ. ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ರಾಯಚೂರು ಜಿಲ್ಲೆ ಹಾಗೂ ಸಿಂಧನೂರು ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ತಾಲೂಕಿನ ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸೇವೆ, ಶಿಸ್ತು, ಸಹಬಾಳ್ವೆ ಮತ್ತು ದೇಶಭಕ್ತಿಯಂತಹ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ರೂಢಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಉಗಮ, ವಿಶ್ವಾದ್ಯಂತ ಅದರ ಬೆಳವಣಿಗೆ, ಭಾರತದಲ್ಲಿ ಚಳವಳಿ ನಡೆದು ಬಂದ ಹಾದಿ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅದರ ಪಾತ್ರದ ಕುರಿತು ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯ ವೀರೇಶ ಗೋನವಾರ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇತರರಿಗೆ ಸಹಾಯ ಮಾಡುವ ಗುಣ, ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸುವ ಮನೋಭಾವ ಹಾಗೂ ತಂಡವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಇಂತಹ ಚಟುವಟಿಕೆಗಳು ಕಲಿಸಿಕೊಡುತ್ತವೆ ಎಂದು ಅಭಿಪ್ರಾಯಪಟ್ಟರು.

ಸಮಾಜಸೇವೆಯಿಂದ ದೊರೆಯುವ ಆತ್ಮತೃಪ್ತಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುತ್ತದೆ. ಶಾಲೆಯ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳಿಗೆ ಸೇರ್ಪಡೆಯಾಗಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಶಿಕ್ಷಕರು ಹಾಗೂ ಪಾಲಕರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಘಟಕಗಳನ್ನು ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಶಾಲೆಯ ಸ್ಕೌಟ್ ಮಾಸ್ಟರ್ ಜಡೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾ ಪಬ್ಲಿಕ್ ಶಾಲೆಯ ಗೈಡ್ ಆರತಿ, ಶಾಲೆಯ ಶಿಕ್ಷಕರಾದ ಭೀಮರೆಡ್ಡಿ, ಬಸವರಾಜ, ಮೌನೇಶಪ್ಪ, ಮಲ್ಲಪ್ಪ ಕೆ., ಮೌನೇಶ, ಉಮೇಶ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.