ದೇವದುರ್ಗ: ಸಹಕಾರ ಸಂಘಗಳು ಕೇವಲ ಸಾಲ ವಿತರಣೆಗೆ ಸೀಮಿತವಾಗದೆ, ಬಡವರು, ಸಣ್ಣ ವ್ಯಾಪಾರಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಗೆ ನೆರವಾಗಬೇಕು. ಜನಸಾಮಾನ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸಬೇಕು ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಶಾಂತಿನಗರದಲ್ಲಿ ಭಾನುವಾರ ಅರುಂಧತಿ ಸಹಕಾರ ಸಂಘದ ನೂತನ ಬ್ಯಾಂಕ್ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವುದರೊಂದಿಗೆ ಸಮಾಜದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವುದು ಸಹಕಾರ ಸಂಘಗಳ ಪ್ರಮುಖ ಉದ್ದೇಶವಾಗಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅಗತ್ಯ ಸಾಲ ಸೌಲಭ್ಯ ಕಲ್ಪಿಸಿ, ಅವರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಬ್ಯಾಂಕ್‌ಗಳು ಮುಂದಾಗಬೇಕು ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು. ವಿಶೇಷವಾಗಿ ಮಹಿಳೆಯರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಬೇಕು ಎಂದರು.

ಕಳೆದ ಮೂರು ವರ್ಷಗಳಲ್ಲಿ ಸ್ವಸಹಾಯ ಗುಂಪುಗಳಿಗೆ ವಿವಿಧ ಯೋಜನೆಗಳ ಮೂಲಕ ನೆರವು ದೊರೆತಿದ್ದು, ಅನೇಕರು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಸಾಲ ವಿತರಿಸುವುದರ ಜೊತೆಗೆ ಸಕಾಲದಲ್ಲಿ ಮರುಪಾವತಿ ಮಾಡುವ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಸಹಕಾರ ಸಂಘಗಳ ಆರ್ಥಿಕ ಸ್ಥಿರತೆಯೂ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನೇಕ ಸಣ್ಣ ವ್ಯಾಪಾರಿಗಳು ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಹೆಚ್ಚಿನ ಬಡ್ಡಿದರದ ಸಾಲದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇಂತಹ ಕುಟುಂಬಗಳಿಗೆ ಸಹಕಾರ ಬ್ಯಾಂಕ್‌ಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಿದರೆ ಅವರ ಬದುಕಿಗೆ ದೊಡ್ಡ ಆಸರೆಯಾಗಲಿದೆ ಎಂದು ಹೇಳಿದರು.

ಸಣ್ಣಪುಟ್ಟ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು ಹಾಗೂ ದುಡಿಯುವ ವರ್ಗದ ಜನರಿಗೆ ಅಗತ್ಯ ಬಂಡವಾಳ ಒದಗಿಸಿ ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿದಾಗ ಮಾತ್ರ ಸಹಕಾರ ಸಂಘಗಳ ಸ್ಥಾಪನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಮಾತನಾಡಿ, ಸಹಕಾರ ಬ್ಯಾಂಕ್‌ಗಳು ಸಣ್ಣ ವ್ಯಾಪಾರಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಪ್ರತಿಯೊಂದು ವ್ಯಾಪಾರಕ್ಕೂ ಅದರದೇ ಆದ ಬಂಡವಾಳದ ಅಗತ್ಯವಿದ್ದು, ವ್ಯಾಪಾರಿಗಳ ಆರ್ಥಿಕ ಸಾಮರ್ಥ್ಯ ಹಾಗೂ ಉದ್ಯಮದ ಸ್ವರೂಪಕ್ಕೆ ಅನುಗುಣವಾಗಿ ಸಾಲ ಸೌಲಭ್ಯ ಕಲ್ಪಿಸಬೇಕು ಎಂದರು.

ರಾಜ್ಯ ಸರ್ಕಾರ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಅವುಗಳ ಸದುಪಯೋಗ ಪಡೆದುಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಸಹಕಾರ ಸಂಘಗಳು ಸರ್ಕಾರದ ಯೋಜನೆಗಳು ಮತ್ತು ಜನಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಲಕ್ಷ್ಮಣ ಅಕ್ಕರಕಿ, ಅಯ್ಯಳಪ್ಪ, ರಮೇಶ ರಾಮನಾಳ, ಬಸವರಾಜ ಅಕ್ಕರಕಿ, ನಟರಾಜ ಅಕ್ಕರಕಿ ಸೇರಿದಂತೆ ಸಹಕಾರ ಸಂಘದ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.