ಮಾನ್ವಿ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಅಗತ್ಯವಿದ್ದು, ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕಾನೂನುಗಳ ಕುರಿತು ಅರಿವು ಹೊಂದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಸಾಧ್ಯ ಎಂದು ಮಾನ್ವಿ ಜೆಎಂಎಫ್‌ಸಿ ಹಾಗೂ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಹೆಚ್. ಕೊಣ್ಣೂರು ಹೇಳಿದರು.

ತಾಲೂಕಿನ ಮದ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ್ದು, ಅವುಗಳ ರಕ್ಷಣೆಗಾಗಿ ವಿವಿಧ ಕಾನೂನುಗಳನ್ನು ರೂಪಿಸಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಕಾನೂನು ಉಲ್ಲಂಘಿಸುವವರು ಶಿಕ್ಷೆಗೆ ಒಳಪಡಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

ತಾಲೂಕು ಕಾನೂನು ಸೇವಾ ಸಮಿತಿಯು ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಮಾಹಿತಿ ಹಾಗೂ ಅಗತ್ಯ ನೆರವು ಒದಗಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದವರು, ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ಅರ್ಹ ವ್ಯಕ್ತಿಗಳು, ಮಹಿಳೆಯರು ಹಾಗೂ ಮಕ್ಕಳು ಉಚಿತ ಕಾನೂನು ನೆರವು ಪಡೆಯಬಹುದು. ನ್ಯಾಯಾಲಯದಲ್ಲಿ ಪ್ರಕರಣಗಳನ್ನು ನಡೆಸಲು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ವಕೀಲರನ್ನು ನೇಮಿಸುವ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು.

ಪ್ರತಿಯೊಬ್ಬ ನಾಗರಿಕನಿಗೂ ಮೂಲಸೌಲಭ್ಯಗಳು, ಪೌಷ್ಟಿಕ ಆಹಾರ ಹಾಗೂ ಮಕ್ಕಳಿಗೆ ಶಿಕ್ಷಣ ದೊರೆಯುವುದು ಅತ್ಯಂತ ಮುಖ್ಯವಾಗಿದೆ. ಜನನ ಮತ್ತು ಮರಣ ಪ್ರಮಾಣಪತ್ರಗಳು ಸೇರಿದಂತೆ ವಿವಿಧ ದಾಖಲೆಗಳಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಕಾನೂನುಬದ್ಧ ಮಾರ್ಗಗಳಿವೆ. ಅಗತ್ಯವಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು.

ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವುದು ಕಾನೂನುಬಾಹಿರವಾಗಿದ್ದು, ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಕ್ಕಳ ಸುರಕ್ಷತೆಗಾಗಿ ಜಾರಿಯಲ್ಲಿರುವ ಪೋಕ್ಸೊ ಕಾಯ್ದೆಯು ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯಿಂದ ಮಕ್ಕಳನ್ನು ರಕ್ಷಿಸುವ ಪ್ರಮುಖ ಕಾನೂನಾಗಿದೆ. ವಿದ್ಯಾರ್ಥಿಗಳು ಇಂತಹ ಕಾನೂನುಗಳ ಬಗ್ಗೆ ಅರಿವು ಹೊಂದಿ ತಮ್ಮ ಸುರಕ್ಷತೆಯೊಂದಿಗೆ ಇತರರ ಹಕ್ಕುಗಳನ್ನೂ ಗೌರವಿಸಬೇಕು ಎಂದು ಸಲಹೆ ನೀಡಿದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಗೆ ಅರ್ಹವಾದ ಪ್ರಕರಣಗಳನ್ನು ಪರಸ್ಪರ ಒಪ್ಪಂದದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಲೋಕ ಅದಾಲತ್ ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಕೀಲ ದತ್ತಾತ್ರೇಯ ಹಿರೇಕೊಟ್ನೆಕಲ್ ಅವರು ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಮಹತ್ವ ಹಾಗೂ ಉಚಿತ ಕಾನೂನು ಅರಿವು ಮತ್ತು ನೆರವು ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ನಾಗಪ್ಪ ಮಾಲಗಟ್ಟಿ, ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಬಾದರದಿನ್ನಿ, ಹಿರಿಯ ವಕೀಲ ಗುಮ್ಮ ಬಸವರಾಜ, ವಕೀಲರಾದ ಚನ್ನಬಸವನಾಯಕ ಬಲ್ಲಟ್ಟಗಿ, ರಾಘವೇಂದ್ರ, ಶಶಿಕಾಂತಯ್ಯ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.