ಮಾನ್ವಿ: ದೀಪಾವಳಿ ಹಬ್ಬದ ಬಲಿಪಾಡ್ಯಮಿ ಅಂಗವಾಗಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಕ್ಷೇತ್ರ ಶ್ರೀ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ ಸಾಹುಕಾರ್ ಅವರು ಗೋಪೂಜೆ ನೆರವೇರಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನೀರಮಾನ್ವಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನೀರಮಾನ್ವಿ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು, ದೀಪಾವಳಿ ಪಾಡ್ಯದ ಪ್ರಯುಕ್ತ ಸಾಂಪ್ರದಾಯಿಕವಾಗಿ ಗೋಪೂಜೆ ನೆರವೇರಿಸಿ, ನಾಡಿನ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಗೆ ಗೌರವ ಸಲ್ಲಿಸಿದರು.

ಬಳಿಕ ಶ್ರೀ ಯಲ್ಲಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಮಾನ್ವಿ ವಿಧಾನಸಭಾ ಕ್ಷೇತ್ರದ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸುವಂತೆ ಪ್ರಾರ್ಥಿಸಿದರು. ಕ್ಷೇತ್ರದಲ್ಲಿ ಉತ್ತಮ ಮಳೆ, ಬೆಳೆ ಸಮೃದ್ಧಿಯಾಗಿ ರೈತರ ಬದುಕು ಹಸನಾಗಲಿ ಹಾಗೂ ಎಲ್ಲ ವರ್ಗದ ಜನರು ನೆಮ್ಮದಿ ಮತ್ತು ಸೌಹಾರ್ದತೆಯಿಂದ ಜೀವನ ನಡೆಸುವಂತಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು.

ದೀಪಾವಳಿ ಹಬ್ಬವು ಬೆಳಕು, ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿದ್ದು, ಬಲಿಪಾಡ್ಯಮಿಯಂದು ಗೋಪೂಜೆ ನೆರವೇರಿಸುವುದು ನಮ್ಮ ನಾಡಿನ ಸಂಪ್ರದಾಯಗಳಲ್ಲಿ ಒಂದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದ್ದು, ಕೃಷಿ ಹಾಗೂ ಗ್ರಾಮೀಣ ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿವೆ. ಇಂತಹ ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಭೀಮರಾಯ ರಾಮಸಮುದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಿ.ಕೆ. ಅಮರೇಶಪ್ಪ ವಕೀಲರು, ಸಿದ್ದಲಿಂಗಪ್ಪ ವಕೀಲರು, ಗೋಪಾಲ್ ನಾಯಕ ನೀರಮಾನ್ವಿ, ಬೀರಪ್ಪ ಬಲ್ಲಟಗಿ, ಶರಣಬಸವ ನೀರಮಾನ್ವಿ, ರಸೂಲ್ ಖುರೇಷಿ, ಸತ್ತಾರ್ ಬಂಗ್ಲೆವಾಲೆ, ರಂಗನಾಥ ನಾಯಕ, ಮಹಾಂತೇಶ ನಕ್ಕುಂದಿ, ಕಂದಾಯ ನಿರೀಕ್ಷಕ ಚರಣ್ ಸಿಂಗ್ ಠಾಕೂರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.