ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ದೀಪಾವಳಿ ಪಾಡ್ಯ ಹಬ್ಬದ ಅಂಗವಾಗಿ ಆಯೋಜಿಸಿದ್ದ ಕಿರು ಜಾತ್ರಾ ಮಹೋತ್ಸವಕ್ಕೆ ಶಾಸಕ ಜಿ. ಹಂಪಯ್ಯ ನಾಯಕ ಅವರು ಗೋ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಮಂಗಳವಾರ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರು, ಗೋವಿಗೆ ಪೂಜೆ ಸಲ್ಲಿಸಿ, ಬಳಿಕ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ. ಹಂಪಯ್ಯ ನಾಯಕ, ದೀಪಾವಳಿ ಹಬ್ಬವು ಬೆಳಕು, ಸಮೃದ್ಧಿ ಹಾಗೂ ಸಂತೋಷದ ಸಂಕೇತವಾಗಿದೆ. ಹಬ್ಬದ ಅಂಗವಾಗಿ ಗೋ ಪೂಜೆ ನೆರವೇರಿಸುವುದು ನಮ್ಮ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

ಶ್ರೀ ರೇಣುಕಾ ಯಲ್ಲಮ್ಮದೇವಿಯ ಕೃಪೆಯಿಂದ ನಾಡಿನಲ್ಲಿ ಉತ್ತಮ ಮಳೆಯಾಗಿ, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಇಳುವರಿ ದೊರೆಯಲಿ. ಕೃಷಿ ಚಟುವಟಿಕೆಗಳು ಸಮೃದ್ಧಿಯಾಗಿ ನಡೆದು, ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತಾಗಲಿ. ನಾಡಿನ ಜನತೆ ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು.

ಗ್ರಾಮೀಣ ಭಾಗಗಳಲ್ಲಿ ನಡೆಯುವ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜನರ ನಡುವಿನ ಪರಸ್ಪರ ಬಾಂಧವ್ಯ, ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬಲಪಡಿಸುತ್ತವೆ. ಇಂತಹ ಆಚರಣೆಗಳು ನಮ್ಮ ನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ದೀಪಾವಳಿ ಪಾಡ್ಯದ ಅಂಗವಾಗಿ ದೇವಸ್ಥಾನದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಅಧ್ಯಕ್ಷರೂ ಆಗಿರುವ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ಕಂದಾಯ ನಿರೀಕ್ಷಕ ಚರಣ್ ಸಿಂಗ್ ಠಾಕೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಾಫೂರ್ ಸಾಬ್, ವಕೀಲರಾದ ಬಿ.ಕೆ. ಅಮರೇಶಪ್ಪ, ಸಿದ್ದಲಿಂಗಪ್ಪ, ಗೋಪಾಲ್ ನಾಯಕ ನೀರಮಾನ್ವಿ, ಬೀರಪ್ಪ ಬಲ್ಲಟಗಿ, ಶರಣಬಸವ ನೀರಮಾನ್ವಿ, ರಸೂಲ್ ಕುರೇಶಿ, ಸತ್ತಾರ್ ಬಂಗ್ಲೆವಾಲೆ, ರಂಗನಾಥ ನಾಯಕ, ಮಹಾಂತೇಶ ನಕ್ಕುಂದಿ ಸೇರಿದಂತೆ ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.