ರಾಯಚೂರು: ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸಂಘಟನೆಯ ತಾಲೂಕು ಉಪಾಧ್ಯಕ್ಷ ಕೃಷ್ಣ ಹಾಗೂ ಹೋಬಳಿ ಅಧ್ಯಕ್ಷ ಸುರೇಶ್ ಅವರ ನೇತೃತ್ವದಲ್ಲಿ ಕಾಡ್ಲೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) ಮನವಿ ಸಲ್ಲಿಸಲಾಯಿತು. ಬಳಿಕ ಅಧಿಕಾರಿಯೊಂದಿಗೆ ಅರಷಿಣಗಿ ಗ್ರಾಮಕ್ಕೆ ತೆರಳಿ ಸಮಸ್ಯೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿವಾಸಿಗಳ ಅಹವಾಲುಗಳನ್ನು ಆಲಿಸಲಾಯಿತು.
ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿರುವ ಸುಮಾರು 35 ಮನೆಗಳ ನಿವಾಸಿಗಳು ದಶಕಗಳಿಂದ ಸಮರ್ಪಕ ಚರಂಡಿ ಹಾಗೂ ಗೃಹಬಳಕೆಯ ನೀರಿನ ಪೈಪ್ಲೈನ್ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಮನೆಗಳಿಂದ ಹೊರಬರುವ ಕೊಳಚೆ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆಯಿಲ್ಲದಿರುವುದರಿಂದ ಸ್ವಚ್ಛತೆ ಕಾಪಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರು.
ಓಣಿಯಲ್ಲಿ ಸುಸಜ್ಜಿತ ಚರಂಡಿ ನಿರ್ಮಿಸುವುದರ ಜೊತೆಗೆ ಕೃಷ್ಣಾ ನದಿಯಿಂದ ಪಂಪ್ಮೋಟಾರ್ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಪೈಪ್ಲೈನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮದಲ್ಲಿರುವ ಆರ್ಒ ಶುದ್ಧ ಕುಡಿಯುವ ನೀರಿನ ಘಟಕವನ್ನು ಗ್ರಾಮ ಪಂಚಾಯಿತಿಯೇ ಸಮರ್ಪಕವಾಗಿ ನಿರ್ವಹಿಸಿ, ಸಾರ್ವಜನಿಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ಒದಗಿಸಬೇಕು. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಮತ್ತೊಂದು ಆರ್ಒ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾರಮ್ಮ ದೇವಸ್ಥಾನದಿಂದ ಕೃಷ್ಣಾ ನದಿಯವರೆಗೆ ಇರುವ ರಸ್ತೆಯನ್ನು ಪಿಡಿಒ ಹಾಗೂ ಸಂಘಟನೆಯ ಪದಾಧಿಕಾರಿಗಳು ಪರಿಶೀಲಿಸಿದರು. ರಸ್ತೆ ಹದಗೆಟ್ಟಿರುವುದರಿಂದ ಮಳೆಗಾಲದಲ್ಲಿ ಸಾರ್ವಜನಿಕರು ಹಾಗೂ ಭಕ್ತರು ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಪ್ರತಿವರ್ಷ ಮಾರಮ್ಮ ದೇವಸ್ಥಾನದಿಂದ ರಂಗಸ್ಥಳಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದೇ ರಸ್ತೆಯನ್ನು ಬಳಸುತ್ತಾರೆ. ಆದ್ದರಿಂದ ಮಾರಮ್ಮ ದೇವಸ್ಥಾನದಿಂದ ಕೃಷ್ಣಾ ನದಿಯವರೆಗೆ ಗುಣಮಟ್ಟದ ಸಿಮೆಂಟ್ ಕಾಂಕ್ರೀಟ್ (ಸಿಸಿ) ರಸ್ತೆ ನಿರ್ಮಿಸಬೇಕು. ರಸ್ತೆಯ ಎರಡೂ ಬದಿಗಳಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗಲು ಚರಂಡಿ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಜನರಿಗೆ ಕುಡಿಯುವ ನೀರು, ಚರಂಡಿ ಹಾಗೂ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಹಲವು ದಶಕಗಳಿಂದ ಬಗೆಹರಿಯದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿಗಳನ್ನು ಶೀಘ್ರ ಆರಂಭಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗದಿದ್ದರೆ ಸಂಬಂಧಪಟ್ಟ ಮೇಲಧಿಕಾರಿಗಳು ಹಾಗೂ ಇಲಾಖೆಗಳ ಗಮನಕ್ಕೆ ತಂದು ಶಾಶ್ವತ ಪರಿಹಾರ ಕಲ್ಪಿಸಬೇಕು. ಸಾರ್ವಜನಿಕರ ಮೂಲಭೂತ ಸೌಲಭ್ಯಗಳ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ತಾಲೂಕು ಉಪಾಧ್ಯಕ್ಷ ಕೃಷ್ಣ, ಹೋಬಳಿ ಅಧ್ಯಕ್ಷ ಸುರೇಶ್, ಪರಿಶಿಷ್ಟ ಜಾತಿ ಓಣಿಯ ನಿವಾಸಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.



