ರಾಯಚೂರು, ನ.11: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ (DAY-NRLM) ಅಕ್ಕ ಕೆಫೆಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ರಾಯಚೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಸಾಧನೆಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರಿಗೆ ರಾಜ್ಯಮಟ್ಟದ ಪ್ರಶಂಸೆ ವ್ಯಕ್ತವಾಗಿದೆ.

ಜಿಲ್ಲೆಯ ವಿವಿಧೆಡೆ ಒಟ್ಟು ಎಂಟು ಅಕ್ಕ ಕೆಫೆಗಳನ್ನು ಯಶಸ್ವಿಯಾಗಿ ಸ್ಥಾಪಿಸುವ ಮೂಲಕ ರಾಜ್ಯದಲ್ಲಿಯೇ ಅತಿ ಹೆಚ್ಚು ಅಕ್ಕ ಕೆಫೆಗಳನ್ನು ಅನುಷ್ಠಾನಗೊಳಿಸಿದ ಜಿಲ್ಲೆಯೆಂಬ ಹೆಗ್ಗಳಿಕೆಗೆ ರಾಯಚೂರು ಪಾತ್ರವಾಗಿದೆ.

ಈ ಸಾಧನೆಯನ್ನು ಗುರುತಿಸಿರುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ನಿರ್ದೇಶಕಿ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ (ಐಎಎಸ್) ಅವರು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ್ ಕಾಂದೂ (ಐಎಎಸ್) ಅವರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.

ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಕೃಷಿಯೇತರ ಚಟುವಟಿಕೆಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹಿಸುವುದು ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವುದು ಅಕ್ಕ ಕೆಫೆ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವ ಹಾಗೂ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಅಕ್ಕ ಕೆಫೆಗಳನ್ನು ಆರಂಭಿಸಿರುವುದು ಮಹಿಳಾ ಉದ್ಯಮಶೀಲತೆಗೆ ಹೊಸ ಅವಕಾಶಗಳನ್ನು ಕಲ್ಪಿಸಿದೆ. ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಿರ್ವಹಿಸುವ ಮೂಲಕ ಆದಾಯ ಗಳಿಸಲು ಹಾಗೂ ಆರ್ಥಿಕವಾಗಿ ಸಬಲರಾಗಲು ಈ ಯೋಜನೆ ಸಹಕಾರಿಯಾಗಿದೆ ಎಂದು ಅಭಿಯಾನ ನಿರ್ದೇಶಕರು ಪ್ರಶಂಸನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ, ಸ್ವಸಹಾಯ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಸಮನ್ವಯದಿಂದ ಕಾರ್ಯನಿರ್ವಹಿಸಿರುವುದು ಈ ಸಾಧನೆಗೆ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಕ್ಕ ಕೆಫೆಗಳ ಮೂಲಕ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಅವರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಗ್ರಾಮೀಣ ಜೀವನೋಪಾಯ ಚಟುವಟಿಕೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಯತ್ನ ಇತರ ಜಿಲ್ಲೆಗಳಿಗೂ ಮಾದರಿಯಾಗಿದೆ ಎಂದು ಪ್ರಶಂಸಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅಕ್ಕ ಕೆಫೆಗಳ ನಿರಂತರ ಮತ್ತು ಸುಸ್ಥಿರ ಕಾರ್ಯನಿರ್ವಹಣೆಗೆ ಒತ್ತು ನೀಡಬೇಕು. ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸುವುದರೊಂದಿಗೆ ಮಹಿಳೆಯರ ಉದ್ಯಮಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಭಿಯಾನ ನಿರ್ದೇಶಕರು ಆಶಯ ವ್ಯಕ್ತಪಡಿಸಿದ್ದಾರೆ.

ಈ ಸಾಧನೆಗೆ ಶ್ರಮಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳನ್ನು ಅಭಿನಂದಿಸಿರುವ ಅವರು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಇದೇ ರೀತಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸುವಂತೆ ತಿಳಿಸಿದ್ದಾರೆ.