ರಾಯಚೂರು, ನ.12 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾಗೃತಿ ಹಾಗೂ ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮಗಳ ಮೂಲಕ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಗುರಿಗಳನ್ನು ನಿಗದಿತ ಅವಧಿಯೊಳಗೆ ಸಾಧಿಸಬೇಕು. ಸಮಿತಿಯು ಶಿಫಾರಸು ಮಾಡಿರುವ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಸೂಚಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್ಪಿ) ಅಡಿಯಲ್ಲಿ ಒದಗಿಸಲಾಗುವ ವಸತಿ, ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಧನ ವಿತರಣೆಯಲ್ಲಿ ಅನಗತ್ಯ ವಿಳಂಬವಾಗಬಾರದು. ಪರಿಶಿಷ್ಟ ಸಮುದಾಯಗಳ ಕಾಲೋನಿಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಬೇಕು. ಅರ್ಹರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಫಲಾನುಭವಿಗಳಿಗೆ ಅಗತ್ಯ ಪ್ರಮಾಣದ ಅನುದಾನ ಬಿಡುಗಡೆಯಾಗದ ಕಾರಣ ಸಲ್ಲಿಕೆಯಾಗಿರುವ ಎಲ್ಲ ಪ್ರಸ್ತಾವನೆಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳಿಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಕೆಲವು ಗ್ರಾಮಗಳಲ್ಲಿ ಎಲ್ಲ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರನ್ನು ಒಳಗೊಂಡು ನಿಯಮಿತವಾಗಿ ಸಭೆಗಳನ್ನು ಆಯೋಜಿಸಬೇಕು. ಸಭೆಗಳ ಕುರಿತು ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಮುಂಚಿತವಾಗಿ ಮಾಹಿತಿ ನೀಡಬೇಕು. ಎಲ್ಲ ಸಮುದಾಯಗಳ ಜನರನ್ನು ಒಗ್ಗೂಡಿಸಿ ಶಾಂತಿ ಮತ್ತು ಸೌಹಾರ್ದತೆಯ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪ್ರತಿ ಬುಧವಾರ ಶಾಂತಿಪಾಲನಾ ಸಭೆಗಳನ್ನು ನಡೆಸಲಾಗುತ್ತಿದೆ. ಈ ಸಭೆಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಮುದಾಯಗಳ ನಡುವೆ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಬಾಳ್ವೆಯ ಮಹತ್ವದ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.
ಅದೇ ರೀತಿ ಪ್ರತಿ ಭಾನುವಾರ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಪೊಲೀಸ್ ಠಾಣೆಯಲ್ಲಿ ಸಭೆ ನಡೆಯದಿದ್ದರೆ ಆ ಕುರಿತು ತಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಅವರು ಹಿಂದಿನ ಸಭೆಯ ನಡಾವಳಿಗಳನ್ನು ಓದಿ ವಿವರಿಸಿದರು.
ಸಭೆಯಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಸಮಿತಿ ಸದಸ್ಯರಾದ ರವೀಂದ್ರ ಜಲ್ದಾರ್, ಕೆ.ಇ. ಕುಮಾರ್, ಹೇಮರಾಜ್ ಅಸ್ಕಿಹಾಳ್, ಎನ್. ರಘುವೀರ್ ನಾಯಕ, ಡಾ. ರವಿಕುಮಾರ್ ಅಸ್ಕಿಹಾಳ್, ಪವನ್ ಕಿಶೋರ್ ಪಾಟೀಲ್, ಬಸವರಾಜ ನಕ್ಕುಂದಿ, ಟಿ. ಸುಧಾಮ, ರಿಮ್ಸ್ ನಿರ್ದೇಶಕ ಡಾ. ಬಿ.ಕೆ. ರಮೇಶ್, ಆಹಾರ ಇಲಾಖೆಯ ಉಪನಿರ್ದೇಶಕ ನಜೀರ್ ಅಹ್ಮದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಸೇರಿದಂತೆ ವಿವಿಧ ತಾಲೂಕುಗಳ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.



